ಸಿದ್ದರಾಮಯ್ಯ ಅವರು ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ
ಬೆಂಗಳೂರು: ಸಿದ್ದರಾಮಯ್ಯ ಅವರು ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಪಾಲರು ಪ್ರಸ್ತುತ ಅಲಭ್ಯವಾಗಿರುವುದರಿಂದ, ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಗೆ ಸಲ್ಲಿಕೆ ಮಾಡಲಾಗಿದೆ. ಈ ಕಾರಣದಿಂದಾಗಿ ರಾಜೀನಾಮೆ ತಕ್ಷಣಕ್ಕೆ ಅಂಗೀಕಾರವಾಗುವುದಿಲ್ಲವಾದರೂ, ಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಸಿದ್ದರಾಮಯ್ಯ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ 2902 ದಿನಗಳ ಸುದೀರ್ಘ ಅವಧಿಗೆ ಆಡಳಿತ ನಡೆಸಿದ್ದು, ಈ ಮೂಲಕ ದೇವರಾಜ ಅರಸರ (2792 ದಿನಗಳು) ದಾಖಲೆಯನ್ನು ಮೀರಿ ರಾಜ್ಯ ಕಂಡ ಏಕೈಕ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ. ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಲೋಕಭವನಕ್ಕೆ ತೆರಳಿ ರಾಜೀನಾಮೆ ಪತ್ರ ನೀಡಿದ್ದೇನೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರಿನಲ್ಲಿ ಇಲ್ಲ. ಹಾಗಾಗಿ ಅವರ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ಮೊನ್ನೆ ಹೈಕಮಾಂಡ್ನವರು ರಾಜೀನಾಮೆ ಕೊಡಿ ಎಂದು ಹೇಳಿದ್ದರು. ಹೈಕಮಾಂಡ್ ಸೂಚಿಸಿದಾಗ ಅದಕ್ಕೆ ಸಮ್ಮತಿ ಸೂಚಿಸಿದ್ದೆ. ನಾಡಿದ್ದು ರಾಜೀನಾಮೆ ಕೊಡುತ್ತೇನೆ ಎಂದು ಅವರಿಗೆ ತಿಳಿಸಿದ್ದೆ. ಹಾಗಾಗಿ ಇಂದು ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿದ್ದೇನೆ ಎಂದವರು ತಿಳಿಸಿದ್ದಾರೆ.
ಕಾಮೆಂಟ್ ಬಿಡಿ