ಕರ್ನಾಟಕ

ಸೋಮವಾರ ಸಂಜೆ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿ ಆಯ್ಕೆಗೆ ಕಾಂಗ್ರೆಸ್‌ನಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ. ಸಿದ್ದರಾಮಯ್ಯ ಅವರು ಗುರುವಾರ ರಾಜೀನಾಮೆ ಸಲ್ಲಿಸಿದ್ದು,ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅವರು ಅಂಗೀಕರಿಸಿ ಸಚಿವ ಸಂಪುಟವನ್ನು ವಿಸರ್ಜನೆ ಮಾಡಿದ್ದಾರೆ.

ಇದರಂತೆ ನೂತನ ಸರ್ಕಾರ, ಸಂಪುಟ ರಚನೆಯ ಪ್ರಕ್ರಿಯೆಯ ಭಾಗವಾಗಿ ಶಾಸಕಾಂಗ ಸಭೆಯನ್ನು ಶನಿವಾರ(ಮೇ.30) ಸಂಜೆ 4 ಗಂಟೆಗೆ ನಿಗದಿ ಮಾಡಲಾಗಿದ್ದು, ಸಭೆಯಲ್ಲಿ ಪಕ್ಷದ ಶಾಸಕಾಂಗ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ. ಬಳಿಕ ಸರ್ಕಾರ ರಚನೆ ಹಕ್ಕು ಮಂಡಿಸಲಾಗುತ್ತದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಶನಿವಾರ ಸಂಜೆ ವಿಧಾನಸೌಧದ 3ನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ಕಾಂಗ್ರೆಸ್ ತನ್ನ ಎಲ್ಲಾ ಶಾಸಕರಿಗೆ ಸಭೆಯಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ವಿಧಾನ ಪರಿಷತ್ ಸಭಾನಾಯಕ ಎನ್..ಎಸ್. ಭೋಸರಾಜು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಈ ನಡುವೆ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರ ಪಟ್ಟಾಭಿಷೇಕಕ್ಕೆ ಸಕಲ ಸಿದ್ದತೆ ನಡೆಯುತ್ತಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದು ಅಧಿಕೃತವಾಗಿ ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮಾಡುವುದು ಬಹುತೇಕ ಖಚಿತವಾಗಿದೆ.

ಈಗಾಗಲೇ, ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ್ ಅವರು ಪ್ರತ್ಯೇಕವಾಗಿ ದೆಹಲಿಗೆ ಪ್ರಯಾಣಿಸಿದ್ದು, ಮುಖ್ಯಮಂತ್ರಿಯಾಗಿ ಅವಕಾಶ ನೀಡಿದ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸಿದ್ದರಾಮಯ್ಯ ಕೃತಜ್ಞತೆ ಅರ್ಪಿಸಿದ್ದಾರೆ‌. ಎಲ್ಲವೂ ಅಂದುಕೊಂಡಂತೆ ನಡೆದರೆ ಸೋಮವಾರ ಸಂಜೆ ಗೊದೋಳಿ ಮುಹೂರ್ತದಲ್ಲಿ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಅಥವಾ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ಕಾಮೆಂಟ್ ಬಿಡಿ

Join Us