ಶಿಕ್ಷಣ

ಪ್ರಶ್ನೆ ಪತ್ರಿಕೆ ಸೋರಿಕೆ ಮೇ 3 ರಂದು ನಡೆದಿದ್ದ NEET ಪರೀಕ್ಷೆ ರದ್ದು

ನವದೆಹಲಿ: ದೇಶಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ಮೇ 3ರಂದು ನಡೆದಿದ್ದ ನೀಟ್ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಅಧಿಕೃತವಾಗಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಅನುಮೋದನೆಯೊಂದಿಗೆ ಈ ಕಠಿಣ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ನಿರ್ಧಾರ ಮಾಡಲಾಗಿದೆ.

ರದ್ದಾದ ಪರೀಕ್ಷೆಯನ್ನು ಮರು ನಿಗದಿಪಡಿಸಲಾಗುವುದು. ಹೊಸ ಪರೀಕ್ಷಾ ದಿನಾಂಕ ಮತ್ತು ಹೊಸ ಪ್ರವೇಶ ಪತ್ರಗಳ ಮಾಹಿತಿಯನ್ನು ಶೀಘ್ರದಲ್ಲೇ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಮರು ಪರೀಕ್ಷೆಗೆ ವಿದ್ಯಾರ್ಥಿಗಳು ಯಾವುದೇ ಹೆಚ್ಚುವರಿ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಈ ಹಿಂದೆ ಮಾಡಿದ ಶುಲ್ಕ ಪಾವತಿಗಳನ್ನು ಮರುಪಾವತಿಸಲಾಗುತ್ತದೆ. ವಿದ್ಯಾರ್ಥಿಗಳು ಮತ್ತೆ ಅರ್ಜಿ ಸಲ್ಲಿಸುವ ಅಗತ್ಯವೂ ಇಲ್ಲ. ಹಳೆಯ ದಾಖಲಾತಿಗಳು ಮತ್ತು ಆಯ್ದ ಪರೀಕ್ಷಾ ಕೇಂದ್ರಗಳು ಮಾನ್ಯವಾಗಿರುತ್ತವೆ.

ಪರೀಕ್ಷೆ ಬರೆದಿದ್ದ ಸುಮಾರು 22.79 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳಿಗೆ ಈ ನಿರ್ಧಾರದಿಂದ ಅನಾನುಕೂಲವಾಗುವುದನ್ನು ಒಪ್ಪಿಕೊಂಡಿರುವ NTA, ಯಾವುದೇ ಗೊಂದಲಗಳಿದ್ದಲ್ಲಿ ಸಂಪರ್ಕಿಸಲು ಸಹಾಯವಾಣಿ ಸಂಖ್ಯೆಗಳನ್ನು ನೀಡಿದೆ
ಇಮೇಲ್: neet-ug@nta.ac.in ದೂರವಾಣಿ: 011-40759000 / 011-69227700

ವಿದ್ಯಾರ್ಥಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುವ ವದಂತಿಗಳನ್ನು ನಂಬಬಾರದು ಮತ್ತು ಕೇವಲ ಎನ್‌ಟಿಎ ಬಿಡುಗಡೆ ಮಾಡುವ ಅಧಿಕೃತ ಮಾಹಿತಿಯನ್ನು ಮಾತ್ರ ಅವಲಂಬಿಸಬೇಕು ಎಂದು ಸೂಚಿಸಲಾಗಿದೆ.

ಕಾಮೆಂಟ್ ಬಿಡಿ

Join Us