ಹೋಮ್ ಐಸೋಲೇಶನ್ ನಲ್ಲಿರುವವರು ಸಾರ್ವಜನಿಕವಾಗಿ ಕಂಡುಬಂದರೆ ನಿರ್ಧಾಕ್ಷಿಣ್ಯ ಕ್ರಮ ಎಂದು ಎಚ್ಚರಿಕೆ ನೀಡಿದ ಕೊಡಗು ಜಿಲ್ಲಾಧಿಕಾರಿ.

ಮಡಿಕೇರಿ:   ಪಾಸಿಟಿವ್ ಬಂದು ಗೃಹ ಸಂಪರ್ಕ ತಡೆಯಲ್ಲಿರುವ ಕೆಲವರು ಮನೆಯಿಂದ ಹೊರಬಂದು ಓಡಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ಇಂತವರು ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವುದು ಕಂಡುಬಂದಲ್ಲಿ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಎಚ್ಚರಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 
ಗೃಹ ಸಂಪರ್ಕ ತಡೆಯಲ್ಲಿರುವವರಿಗೆ ಕಡ್ಡಾಯವಾಗಿ ಸೀಲು ಹಾಕಬೇಕು. ಯಾವುದೇ ಕಾರಣಕ್ಕೂ ಗೃಹ ಸಂಪರ್ಕ ತಡೆಯಿಂದ ಹೊರಬರಬಾರದು. ಗೃಹಸಂಪರ್ಕ ತಡೆಯಲ್ಲಿ ಇರಲು ಸಾಧ್ಯವಿಲ್ಲದಿದ್ದಲ್ಲಿ ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.   
ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾದಲ್ಲಿ ಹೆಚ್ಚುವರಿಯಾಗಿ ಕೋವಿಡ್ ಆರೈಕೆ ಕೇಂದ್ರಗಳನ್ನು ತೆರೆಯಲಾಗುವುದು. ಆದ್ದರಿಂದ ಕೋವಿಡ್ ಪಾಸಿಟಿವ್ ಬಂದವರು ಕಡ್ಡಾಯವಾಗಿ ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.  
ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಎಲ್ಲರೂ ಕೈಜೋಡಿಸಬೇಕಿದೆ. ಹಾಗಾದಾಗ ಮಾತ್ರ ಕೊಡಗನ್ನು ಕೋವಿಡ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಾಧ್ಯ. ಆದ್ದರಿಂದ ಪ್ರತಿಯೊಬ್ಬರೂ ಆರೋಗ್ಯದ ಕಡೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.   
ಡಾಲಿ ಅವರು ಮಾತನಾಡಿ ಕೋವಿಡ್ ನಿಯಂತ್ರಣ ಸಂಬಂಧ ಗ್ರಾಮ ಮಟ್ಟದಲ್ಲಿ ತಂಡವನ್ನು ರಚಿಸಲಾಗಿದೆ. ಸರ್ಕಾರದ ಮಾರ್ಗಸೂಚಿ ಪಾಲಿಸುವುದು, ಸ್ವಚ್ಛತೆ ಕಡೆ ಗಮನಹರಿಸುವುದು, ಹೀಗೆ ಹಲವು ಮಾಹಿತಿ ನೀಡಲಾಗುತ್ತದೆ ಎಂದರು.   
ವಾರದಲ್ಲಿ ಮೂರು ದಿನ ಬೆಳಗಿನ ವೇಳೆ ತರಕಾರಿ ದಿನಸಿ, ಮತ್ತಿತರವನ್ನು ಕೊಳ್ಳಲು ಅವಕಾಶ ನೀಡಲಾಗಿದ್ದು, ಇದರಿಂದ ಗ್ರಾಮೀಣ ಪ್ರದೇಶದವರು ಪಟ್ಟಣಕ್ಕೆ ಬರಲು ತೊಂದರೆಯಾಗುತ್ತದೆ. ಆದ್ದರಿಂದ ಬೆಳಗ್ಗೆ 8 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಅವಕಾಶ ಮಾಡುವಂತಾಗಬೇಕು ಎಂದು ಅವರು ಕೋರಿದರು.     
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಪ್ರತಿನಿಧಿ ಧನಂಜಯ ಅವರು ಮಾತನಾಡಿ ಈಗಾಗಲೇ ಕೋವಿಡ್ ಮುಖ್ಯವಾಹಿನಿಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದೆ. ಹಾಗೆಯೇ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ ಲಸಿಕೆ ನೀಡುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.  

ಡಾ.ನವೀನ್ ಅವರು ಮಾತನಾಡಿ ಖಾಸಗಿ ಚಿಕಿತ್ಸಾಲಯಗಳು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸೋಂಕಿತರ ಮಾಹಿತಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಒದಗಿಸಬೇಕು ಎಂದು ಅವರು ಸಲಹೆ ಮಾಡಿದರು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸರ್ಕಾರದ ನಿರ್ದೇಶನದಂತೆ ಕೋವಿಡ್ ನಿರೋಧಕ ಲಸಿಕೆಯನ್ನು ಅರ್ಹರಿಗೆ ನೀಡಲಾಗುತ್ತದೆ. ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಕಾರ್ಯಪಡೆಯನ್ನು ರಚಿಸಲಾಗಿದ್ದು, ಪಾಸಿಟಿವ್ ಬಂದಿರುವವರು ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವುದು ಕಂಡು ಬಂದಲ್ಲಿ ತಕ್ಷಣವೇ ಮಾಹಿತಿ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಕೋರಿದರು.  

ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಡಳಿತಾಧಿಕಾರಿ ಡಾ.ನಂಜುಂಡೇಗೌಡ, ಡಾ.ವಿಶಾಲ್ ಕುಮಾರ್, ಡಾ.ಮಂಜುನಾಥ್, ಡಾ.ರೂಪೇಶ್ ಗೋಪಾಲ್ ಇತರರು ಹಲವು ಮಾಹಿತಿ ನೀಡಿದರು.

Add new comment

Restricted HTML

  • You can align images (data-align="center"), but also videos, blockquotes, and so on.
  • You can caption images (data-caption="Text"), but also videos, blockquotes, and so on.